DKDC: ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತದಿಂದ ಸಕಲ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
ಮಂಗಳೂರು: ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತದಿಂದ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರೈತರಿಗೆ ಭರವಸೆ ನೀಡಿದರು.
ಅವರು ಮೇ.10ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರೈತರ ಅಹವಾಲುಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಹತ್ತಿರವಿದೆ. ರೈತ ಸಂಪರ್ಕ ಕೇಂದ್ರದಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಸಲಾಗುವುದು, ಅಲ್ಲಿ ಕೊರತೆ ಆಗದಂತೆ ಎಚ್ಚರ ವಹಿಸಲಾಗಿದೆ, ಆದಾಗ್ಯೂ ಡಿಐಪಿ, ಯೂರಿಯಾ, ಗೊಬ್ಬರದ ಸಮಸ್ಯೆ ಕಂಡುಬಂದಲ್ಲಿ ರೈತರು ಹಾಗೂ ರೈತ ಸಂಘಟನೆಗಳು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರಿಗೆ ನೇರವಾಗಿ ಕರೆ ಮಾಡಿ ಪಡೆಯಬಹುದಾಗಿದೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೀತಾ ಮಾತನಾಡಿ, ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಕೂಡಲೇ ಸಂಪರ್ಕಿಬಹುದಾಗಿದೆ, ಒಂದು ಗಂಟೆಯೊಳಗೆ ರೈತರಿಗೆ ಗೊಬ್ಬರ ಹಾಗೂ ಬಿತ್ತನೆ ಬೀಜದ ಪೂರೈಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು. ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಆರ್. ನಾಯಕ್, ಕೃಷಿ, ಪಶುಸಂಗೋಪನಾ ಇಲಾಖೆ, ಅರಣ್ಯ ಇಲಾಖೆ, ಮೆಸ್ಕಾಂನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ರೈತ ಮುಖಂಡರಾದ ರೂಪೇಶ್ ರೈ, ಸಂಪತ್, ಆಲ್ವಿನ್, ಧನಕೀರ್ತಿ ಬಳಿಪ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ರೈತ ಮುಖಂಡರು ಸಭೆಯಲ್ಲಿದ್ದರು.