HEALTH: ಡೆಂಗ್ಯೂ ತಡೆಗೆ ಅಗತ್ಯ ಮುನ್ನೆಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ನಿಲಯ, ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಐ.ಆರ್.ಎಸ್ ಮಾಡಿಸಬೇಕು. ಜಿಲ್ಲೆಯ ಕಲ್ಲುಕೋರೆಗಳ ಮಾಲೀಕರು ಕೀಟಜನ್ಯ ರೋಗ ನಿಯಂತ್ರಣ ಹಾಗೂ ಕೋರೆಗಳಲ್ಲಿ ಗಪ್ಪಿ ಮೀನುಗಳನ್ನು ಬಿಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸೂಚನೆ ನೀಡಬೇಕು. ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಕಾಮಗಾರಿಗಳಿಗೆ ಬಳಸುವ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಲೋಕೋಪಯೋಗಿ ಇಲಾಖೆಯವರು ಕ್ರಮ ವಹಿಸಬೇಕು ಎಂದವರು ಹೇಳಿದರು. ವೈದ್ಯಕೀಯ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಮಲೇರಿಯಾ ರಕ್ತಲೇಪನ ಪರೀಕ್ಷೆ ನಡೆಸುವಂತೆ ಅವರು ಸೂಚಿಸಿದರು. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕರು ಹಾಗೂ ಅಧೀಕ್ಷಕ ಡಾ. ಸದಾಶಿವ ಶಾನುಭೋಗ, ಲೇಡಿಘೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗ ಪ್ರಸಾದ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಹಾಗೂ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.