Ravikumar: ನರ್ಸಿಂಗ್ ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಅವಶ್ಯ: ಎನ್. ರವಿಕುಮಾರ್
ಮಂಗಳೂರು: ಜಿಲ್ಲೆಯ ಎಲ್ಲಾ ನರ್ಸಿಂಗ್ ಹಾಗೂ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅತಿ ಅವಶ್ಯ ಎಂದು ವಿಶೇಷ ಜಂಟಿ ಸದನ ಸಮಿತಿಯ ಉಪ ಸಮಿತಿಯ ಅಧ್ಯಕ್ಷರೂ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ಅಭಿಪ್ರಾಯಪಟ್ಟರು.
ಅವರು ಮೇ.12ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನರ್ಸಿಂಗ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂಡಿಯನ್ ನರ್ಸಿಂಗ್ ಕೌನ್ಸಿಲ್ನವರ ಮಾರ್ಗಸೂಚಿಗಳಂತೆ ನರ್ಸಿಂಗ್ ಹಾಗೂ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜುಗಳನ್ನು ನಡೆಸಬೇಕು, ಆದರೆ ಬಹಳಷ್ಟು ಕಾಲೇಜುಗಳಲ್ಲಿ ಬೋಧಕರ ಕೊರತೆ, ಪ್ರಯೋಗಾಲಯಗಳು ವ್ಯವಸ್ಥಿತವಾಗಿಲ್ಲ, ಆ ಕಾಲೇಜುಗಳ ವಾಸ್ತವಿಕತೆ ಪರಿಶೀಲಿಸಿ ವರದಿಯನ್ನು ಸದನಕ್ಕೆ ನೀಡಲಾಗುವುದು ಎಂದು ಅವರು ತಿಳಿಸಿದರು. ನರ್ಸಿಂಗ್ ವಿದ್ಯಾರ್ಥಿಗಳು ಐಚ್ಛಿಕ ವಿಷಯ, ಪ್ರಯೋಗ ಶಾಲೆಗಳ ಶಿಕ್ಷಣ ಪಡೆಯುವುದರೊಂದಿಗೆ ಆಸ್ಪತ್ರೆಗಳಲ್ಲಿ ತರಬೇತಿ ಪಡೆಯಲು ಹೋದಾಗ ಸ್ಥಳೀಯರೊಂದಿಗೆ ಕನ್ನಡದಲ್ಲಿ ಮಾತನಾಡುವುದು ಕಷ್ಟವಾಗುತ್ತದೆ, ಅವರಿಗೆ ಕನ್ನಡ ಕಲಿಸುವ ವ್ಯವಸ್ಥೆಯಾಗಬೇಕು ಹಾಗೂ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿರುವಾಗ ನರ್ಸಿಂಗ್ ಕಾಲೇಜುಗಳಲ್ಲಿ ಯಾವುದೇ ರೀತಿಯಲ್ಲಿ ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರ ವಹಿಸುವುದು ಶಿಕ್ಷಣ ಸಂಸ್ಥೆಯ ಕರ್ತವ್ಯ ಎಂದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ, ಕಳೆದ ಕೋವಿಡ್ ಸಂದರ್ಭದಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಕೋವಿಡ್ ನಿಯಂತ್ರಣ ಸೇರಿದಂತೆ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದರು.